




ಕಡಬ ಟೈಮ್ಸ್(KADABA TIMES):ಸುಬ್ರಹ್ಮಣ್ಯ/ಕಡಬ: ಕುಮಾರ ಪರ್ವತ ತಪ್ಪಲಿನಲ್ಲಿ ಧಾರಾಕಾರ ಮಳೆಯಾಗಿದ್ದು ಕುಕ್ಕೆ ದೇಗುಲಕ್ಕೂ ನೀರು ನುಗ್ಗಿದೆ. ದರ್ಪಣತೀರ್ಥ ನದಿಯು ತುಂಬಿ ಹರಿದಿದೆ. ಇದರಿಂದಾಗಿ ಆದಿಸುಬ್ರಹ್ಮಣ್ಯ ದೇವಳದ ಒಳಗೆ ನೀರು ಪ್ರವೇಶಿಸಿದೆ. ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠಕ್ಕೂ ನೀರು ನುಗ್ಗಿದೆ.
ವಿಶೇಷವೆಂದರೆ ಹಲವು ವರ್ಷಗಳ ನಂತರ ಆದಿ ದೇವಳದ ಒಳಗೆ ದರ್ಪಣ ತೀರ್ಥವು ಪ್ರವೇಶಿಸಿದೆ. ದರ್ಪಣತೀರ್ಥ ನದಿಯು ತುಂಬಿ ಹರಿದ ಕಾರಣ ರುದ್ರಪಾದ ಸೇತುವೆಯು ಜಲಾವೃತಗೊಂಡಿದೆ. ದರ್ಪಣ ತೀರ್ಥದಲ್ಲಿನ ಪ್ರವಾಹದಿಂದ ಸುಬ್ರಹ್ಮಣ್ಯ- ಪಂಜ ರಾಜ್ಯ ಸಂಪರ್ಕ ರಸ್ತೆಯ ಸೇತುವೆಯು ಮುಳುಗಡೆ ಭೀತಿ ಎದುರಿಸುತ್ತಿದೆ.

ನದಿ ತಟದಲ್ಲಿನ ಕೆಲ ಮನೆಗಳಿಗೆ ನೀರು ನುಗ್ಗಿದ್ದು ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು,ಹರಿಹರ,ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.ಮುಂಜಾಗ್ರತ ಕ್ರಮವಹಿಸಲು ಎಸ್ ಡಿಆರ್ ಎಪ್ ಹಾಗೂ ಎನ್ ಡಿಆರ್ ಎಪ್ ತಂಡ ಆಗಮಿಸಿದೆ.
ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ನೆರೆ ಸಂದರ್ಭ ಸಾರ್ವಜನಿಕರು ಸಹಕರಿಸಿ, ಸುರಕ್ಷತೆ ಕಡೆ ಹೆಚ್ಚಿನ ಗಮನಹರಿಸಬೇಕು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರು ಮಳೆ ಕಡಿಮೆಯಾದ ಬಳಿಕ ಕ್ಷೇತ್ರ ಸಂದರ್ಶಿಸುವಂತೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ. ದೇಗುಲ ಭೇಟಿ ಮುಂದೂಡುವಂತೆ ಜಿಲ್ಲಾಧಿಕಾರಿಗಳೂ ಸೂಚನೆ ನೀಡಿದ್ದಾರೆ.